ಬೆಂಗಳೂರು: ಗಣೇಶೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರತಿವರ್ಷ ಹಬ್ಬದ ಆಚರಣೆಗೆ ರಾಜ್ಯಾದ್ಯಂತ ಸಿದ್ಧತೆ ಆರಂಭವಾಗಿದೆ. ಆದರೆ, ಈ ವರ್ಷ ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಅದ್ದೂರಿ ಗಣೇಶೋತ್ಸವದ ಬದಲಾಗಿ ಸರಕಾರದ ಮಾರ್ಗಸೂಚಿಯಂತೆ ಉತ್ಸವ ನಡೆಯುವುದು ಖಚಿತವಾಗಿದೆ. ಇದಕ್ಕಾಗಿ ಈಗಾಗಲೇ ಸರ್ಕಾರ ಗಣೇಶ ಉತ್ಸವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯಂತೆಯೇ ಗಣೇಶೋತ್ಸವ ಆಚರಿಸಬೇಕು.
ಗಣೇಶೋತ್ಸವಕ್ಕೆ ಸರಕಾರದ ಮಾರ್ಗಸುಚಿಗಳು
- ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸಬೇಕು.
- ಸಾರ್ವಜನಿಕ ಸ್ಥಳ (ಉದಾ: ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು
- ಯಾವ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ.
- ಗಣೇಶ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕೆ ಅಥವಾ ಯಾವುದೇ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
- ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು.
- ಶ್ರೀ ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ಜತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರ ಗುರುತಿಸಬೇಕು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.
- ಕೊರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟಿನಿಟ್ಟಾಗಿ ಪಾಲಿಸಬೇಕು. ಇದಲ್ಲದೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳ ಮಾರ್ಗಸೂಚಿಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು.