ಮೈಸೂರು: ಕೋವಿಡ್ ಗೆ ಸಂಬಂಧಪಟ್ಟಂತೆ ಊಟ, ಆ್ಯಂಬುಲೆನ್ಸ್, ಚಿಕಿತ್ಸೆ, ಕೋವಿಡ್ ಆಸ್ಪತ್ರೆ ನಿರ್ವಹಣೆಗಳ ಬಗ್ಗೆ ಎಲ್ಲ ಕ್ಷೇತ್ರಗಳ ಶಾಸಕರ ಜೊತೆ ಮಾತನಾಡಲಾಗಿದೆ. ಸಾವಿನ ಸಂಖ್ಯೆ ಇಳಿಮುಖಗೊಳ್ಳಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬಿತ್ಯಾದಿ ವಿಷಯಗಳನ್ನು ಚರ್ಚಿಸಿದ್ದೇವೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ಪ್ರತಿ ಕ್ಷೇತ್ರಗಳ ಪರಿವೀಕ್ಷಣೆ ಮಾಡಲಾಗುವುದು. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಕೆಆರ್ ಎಸ್ ಹಾಗೂ ಕಬಿನಿ ಜಲಾಶಯಗಳು ತುಂಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಲು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ದಿನಾಂಕ ಶೀಘ್ರದಲ್ಲಿಯೇ ನಿಗದಿಯಾಗಲಿದೆ. ಅದಕ್ಕಿಂತ ಮುಖ್ಯವಾಗಿ ಆ.20 ರಂದು ಸಂಪುಟ ಸಭೆ ನಡೆಯಲಿದ್ದು, ಅಲ್ಲಿ ದಸರಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಯಾಗಲಿದೆ. ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳ ಇಲ್ಲಿಗೆ ಬಂದಾಗ ಮಾಹಿತಿ ನೀಡುವಂತೆ ಕೋರಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.